ಶಿವಮೊಗ್ಗ : ಜೋಳ ತುಂಬಿದ್ದ ಲಾರಿಯೊಂದು ಶಿವಮೊಗ್ಗದಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿತ್ತು. ಈ ವೇಳೆ ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ದಂಪತಿ ಭದ್ರಾವತಿಯ ಎಚ್.ಕೆ. ಜಂಕ್ಷನ್ ಬಳಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ. ಲಾರಿಯನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಈ ಘೋರ ಅಪಘಾತ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಈ ಅಪಘಾತದಲ್ಲಿ ಮೃತಪಟ್ಟವರನ್ನು ತರೀಕೆರೆ ತಾಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್ ನಿವಾಸಿ ಬಾಬು (30) ಎಂದು ಗುರುತಿಸಲಾಗಿದೆ. ಅವರ ಪತ್ನಿ ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದು, ಅವರ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲ. ಬಾಬು ಅವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಯಿತಾದರೂ, ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಘಟನೆ ನಡೆದ ತಕ್ಷಣ ಭದ್ರಾವತಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

