Friday, April 17, 2026
Homeತಾಜಾ ಸುದ್ದಿBeltangady : ಗಾಂಜಾ ಮಾರಾಟ ಮಾಡಿದ್ದ ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ

Beltangady : ಗಾಂಜಾ ಮಾರಾಟ ಮಾಡಿದ್ದ ವ್ಯಕ್ತಿಗೆ ಐದು ವರ್ಷ ಜೈಲು ಶಿಕ್ಷೆ

ಬೆಳ್ತಂಗಡಿ (ಏ.17): ಉಜಿರೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ನಿವಾಸಿಯೊಬ್ಬನಿಗೆ ಮಂಗಳೂರಿನ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆಯನ್ನು ಪ್ರಕಟಿಸಿದೆ.


ಪ್ರಕರಣದ ವಿವರಗಳ ಪ್ರಕಾರ, ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ನಿವಾಸಿ ಟಿ.ಇ. ಜೋಸೆಫ್ (42) ಎಂಬಾತನನ್ನು ಉಜಿರೆಯ ರಥಬೀದಿಯಲ್ಲಿ ಬಂಧಿಸಲಾಗಿತ್ತು. ಈತ ಸುಮಾರು 1.500 ಕೆಜಿ ನಿಷೇಧಿತ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದನು. ಅಂದು ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು 50,000 ರೂ. ಎಂದು ಅಂದಾಜಿಸಲಾಗಿದ್ದು, ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ್ ಅವರು ಏಪ್ರಿಲ್ 10, 2026 ರಂದು ಜೋಸೆಫ್‌ನನ್ನು ದೋಷಿ ಎಂದು ಘೋಷಿಸಿದ್ದರು. ಏಪ್ರಿಲ್ 16ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(ಸಿ) ಮತ್ತು 20(ಬಿ) ಅಡಿಯಲ್ಲಿ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಎರಡು ತಿಂಗಳು ಕಠಿಣ ಜೈಲು ಶಿಕ್ಷೆ ಅನುಭವಿಸಬೇಕು ಮತ್ತು ಇದೇ ಕಾಯ್ದೆಯ ಸೆಕ್ಷನ್ 32-ಬಿ(ಎಫ್) ಅಡಿಯಲ್ಲಿ ಮತ್ತೊಂದು ವರ್ಷ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಅಂದಿನ ಬೆಳ್ತಂಗಡಿ ಸಬ್-ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರಮಠ್ ಅವರು ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ಟಾ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಆರೋಪಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ತೀರ್ಪು ಮಾದಕ ದ್ರವ್ಯ ಮಾರಾಟಗಾರರಿಗೆ ನ್ಯಾಯಾಂಗವು ನೀಡಿದ ಖಡಕ್ ಎಚ್ಚರಿಕೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!