ಉಡುಪಿ: ನಗರದ ಆದಿ ಉಡುಪಿ ಎಪಿಎಂಸಿ (APMC) ಮಾರುಕಟ್ಟೆಯ ಹಿಂಭಾಗದಲ್ಲಿರುವ ಪಾಳುಬಿದ್ದ ಬಾವಿಯೊಂದರಲ್ಲಿ ಸುಮಾರು 40 ರಿಂದ 50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಮಂಗಳವಾರ (ಏಪ್ರಿಲ್ 21) ಬೆಳಿಗ್ಗೆ ಪತ್ತೆಯಾಗಿದೆ.
ಮೃತದೇಹವು ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಸುಮಾರು 3-4 ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿಯು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಅಥವಾ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಉಡುಪಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

