ನವದೆಹಲಿ : ಕಾಕ್ರೋಚ್ ಜನತಾ ಪಾರ್ಟಿಯ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಶನಿವಾರ ಮುಂಜಾನೆ ಅಮೆರಿಕದಿಂದ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ಇಮಿಗ್ರೇಷನ್ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ, ಸಮವಸ್ತ್ರ ಹಾಗೂ ಸಾದಾ ಉಡುಪಿನಲ್ಲಿದ್ದ ಸುಮಾರು 10 ರಿಂದ 15 ಅಧಿಕಾರಿಗಳು ಅವರನ್ನು ಏಕಾಏಕಿ ಸುತ್ತುವರಿದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಸಿಜೆಪಿ ಪಕ್ಷವು ಆರೋಪಿಸಿದೆ. ಈ ಘಟನೆಯ ನಂತರ ಅಭಿಜೀತ್ ದಿಪ್ಕೆ ಅವರೊಂದಿಗೆ ಯಾವುದೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ ಮತ್ತು ಅವರನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆದಿರಬಹುದು ಎಂದು ಪಕ್ಷದ ಮುಖಂಡರು ಶಂಕೆ ವ್ಯಕ್ತಪಡಿಸಿದ್ದಾರೆ.
ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಈ ರೀತಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿಜೆಪಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾದ ಸೌರವ್ ದಾಸ್ ಅವರು ತಕ್ಷಣವೇ ಸಂಸತ್ ಮಾರ್ಗ ಪೊಲೀಸ್ ಠಾಣೆಗೆ ಧಾವಿಸಿದ್ದಾರೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆದರೆ, ಈ ಇಡೀ ಹೈಡ್ರಾಮಾದ ಕುರಿತು ಪ್ರತಿಕ್ರಿಯಿಸಿರುವ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ನಿಯೋಜಿಸಲಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು, ದಿಪ್ಕೆ ಅವರನ್ನು ವಶಕ್ಕೆ ಪಡೆದಿರುವ ಕುರಿತು ಸಿಜೆಪಿ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಅದನ್ನು ಸಂಪೂರ್ಣವಾಗಿ ತಳ್ಳಿಹಾಕುವುದಾಗಿ ಸ್ಪಷ್ಟಪಡಿಸಿದ್ದಾರೆ.



